ಕಣಿಪುರ ಸುದ್ದಿಜಾಲ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸೆಪ್ಟಂಬರ್ 30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯೋತ್ಸವ ಪ್ರಶಸ್ತಿ – 2024 ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ ಸಮಾರಂಭ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಿ.ಎಂ ಈ ಮಾಹಿತಿ ಪ್ರಕಟಿಸಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ನಡೆಯುತ್ತಿದ್ದು, ಹಂಪಿಯಿಂದ ಆರಂಭವಾದ ಕನ್ನಡ ರಥ ಯಾತ್ರೆ ಈಗಾಗಲೇ 28 ಜಿಲ್ಲೆಗಳಲ್ಲಿ ಸಾಗಿದ್ದು, ರಥಯಾತ್ರೆಯ ಸಮಾರೋಪ ಸಮಾರಂಭ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆಯಲಿದೆ.
ಕರ್ನಾಟಕ ಸುವರ್ಣ ಸಂಭ್ರಮ -50 ಸಮಾರೋಪ ಸಮಾರಂಭ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ. ರಾಜ್ಯೋತ್ಸವ ಪ್ರಶಸ್ತಿ ಪ್ರದಾನಇದೇ ಸಂದರ್ಭದಲ್ಲಿ ನಡೆಯಲಿದೆ ಎಂದವರು ತಿಳಿಸಿದರು.
ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪ್ರತಿಮೆ ಸ್ಥಾಪನೆಗೆ ಕಾಮಗಾರಿ ಪ್ರಗತಿಯಲ್ಲಿದೆ. ವಿಧಾನಸೌಧ ಆವರಣದಲ್ಲಿ 25ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್ 1ರಂದು ಅನಾವರಣ ನಡೆಸಲು ಉದ್ದೇಶಿಸಲಾಗಿದೆ.
ರಾಜ್ಯದ ನಾಲ್ಕು ವಲಯಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಮೈಸೂರಿನಲ್ಲಿ ಚಿಂತನಾ ಸಮಾವೇಶ, ರಾಯಚೂರಿಗೆ ಗೋಕಾಕ್ ಚಳವಳಿ ಸಂಸ್ಮರಣೆ, ಮಹಾರಾಷ್ಟ್ರದ ಜತ್ ತಾಲೂಕಿನಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವ ಮತ್ತು ಮಂಗಳೂರಿನಲ್ಲಿ ವಿವಿಧ ಅಕಾಡೆಮಿ ಸಹಯೋಗದಲ್ಲಿ ಬಹುಸಂಸ್ಕೃತಿ ಉತ್ಸವ ಆಯೋಜನೆ ಮಾಡಲಾಗುವುದೆಂದು ಸಿಎಂ ತಿಳಿಸಿದ್ದಾರೆ.